ಬೆಂಗಳೂರು/ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಝಳ ಹೆಚ್ಚಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಬ್ರವರಿ 12 ಮತ್ತು 13 ರಂದು ಕರಾವಳಿ ಜಿಲ್ಲೆಗಳಲ್ಲಿ ಅಧಿಕ ತಾಪಮಾನ ಮತ್ತು ತೇವಾಂಶಭರಿತ (Hot and Humid) ಹವೆ ಇರಲಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ (Minimum Temperature) ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲು ತೀವ್ರವಾಗಿರಲಿದ್ದು, ಸಾರ್ವಜನಿಕರು ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ. ಅವಧಿಗೂ ಮುನ್ನವೇ ಬೇಸಿಗೆಯ ಅನುಭವವಾಗುತ್ತಿದ್ದು, ಫೆಬ್ರವರಿ ಮೂರನೇ ವಾರದಿಂದ ಬಿಸಿಲಿನ ತೀವ್ರತೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಬಿಸಿಲಿನ ತಾಪಮಾನದಲ್ಲಿ ಏರಿಕೆ ಹಿನ್ನೆಲೆ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಿ ಮತ್ತು ಮಧ್ಯಾಹ್ನದ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಓಡಾಡುವುದನ್ನು ತಪ್ಪಿಸಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.











