ಉಡುಪಿ: ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ‘ವಂದೇ ಮಾತರಂ’ ಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ನಾಯಕ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 15ರಂದು ಎಐಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಮತ್ತು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಗೂ ‘ವಂದೇ ಮಾತರಂ’ ಗೀತೆಯನ್ನು ಹಾಡಲಾಗುತ್ತಿತ್ತು. ಈ ವೇಳೆ ಸೋನಿಯಾ ಗಾಂಧಿಯವರು ಗೀತೆಯನ್ನು ಮಧ್ಯದಲ್ಲೇ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಿರುವ ಪೃಥ್ವಿರಾಜ್ ಶೆಟ್ಟಿ, “ಇದು ದೇಶದ ರಾಷ್ಟ್ರೀಯ ಭಾವನೆಗಳಿಗೆ ಹಾಗೂ ರಾಷ್ಟ್ರಗೀತೆಗೆ ಮಾಡಿದ ಘೋರ ಅಪಮಾನ” ಎಂದು ಖಂಡಿಸಿದ್ದಾರೆ.
“ಈ ಘಟನೆಯಿಂದ ಕಾಂಗ್ರೆಸ್ ನಾಯಕರಿಗೆ ದೇಶಾಭಿಮಾನ ಎಷ್ಟಿದೆ ಎಂಬುದು ಜಗಜ್ಜಾಹೀರಾಗಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ‘ವಂದೇ ಮಾತರಂ’ ಗೀತೆಗೆ ಈ ರೀತಿ ಅಸಡ್ಡೆ ತೋರಿರುವುದನ್ನು ಬಿಜೆಪಿ ಯುವಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಈ ಕೂಡಲೇ ಸೋನಿಯಾ ಗಾಂಧಿಯವರು ದೇಶದ ಸಮಸ್ತ ಜನರ ಕ್ಷಮೆಯಾಚಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.





